ಕೊಪ್ಪ ತಾಲೂಕಿನಲ್ಲಿ ಮಾನವೀಯತೆ ಕಳೆದುಕೊಂಡ ದುಷ್ಕೃತ್ಯ ನಡೆದಿದೆ. ಸರ್ಕಾರಿ ಶಾಲೆಯ ಅತಿಥಿ ಶಿಕ್ಷಕಿಯೊಬ್ಬರ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿ, ವಿವಸ್ತ್ರಗೊಳಿಸಿ ಮರಕ್ಕೆ ಕಟ್ಟಿಹಾಕಿರುವ ಭೀಕರ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ.
ಕೊಪ್ಪ ತಾಲೂಕಿನ ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಘಟನೆ ಜನರಲ್ಲಿ ಆಕ್ರೋಶ ಮೂಡಿಸಿದೆ. 25 ವರ್ಷದ ಶಿಕ್ಷಕಿ ಶಾಲೆ ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದ ವೇಳೆ ಅಪರಿಚಿತರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಶಿಕ್ಷಕಿಯ ಕೂಗಾಟ ಕೇಳಿ ಸ್ಥಳೀಯರು ಮತ್ತು ಮನೆಯವರು ಧಾವಿಸಿ ರಕ್ಷಿಸಿದ್ದಾರೆ.
ತೀವ್ರವಾಗಿ ಗಾಯಗೊಂಡಿದ್ದ ಶಿಕ್ಷಕಿಯನ್ನು ಮೊದಲು ಕೊಪ್ಪ ಆಸ್ಪತ್ರೆಗೆ ದಾಖಲಿಸಿ, ಬಳಿಕ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಘಟನೆಯ ನಂತರ ಸ್ಥಳೀಯರು ಪ್ರತಿಭಟನೆ ನಡೆಸಿ, ಆರೋಪಿಗಳನ್ನು ತಕ್ಷಣ ಬಂಧಿಸಬೇಕು ಹಾಗೂ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದ್ದಾರೆ.
ಈ ಬಗ್ಗೆ ಚಿಕ್ಕಮಗಳೂರು ಎಸ್‌ಪಿ ಮಾತನಾಡಿ,”ತನಿಖೆಗಾಗಿ ಕೊಪ್ಪ ಡಿವೈಎಸ್‌ಪಿ ನೇತೃತ್ವದಲ್ಲಿ ಮೂರು ವಿಶೇಷ ತಂಡಗಳನ್ನು ರಚಿಸಲಾಗಿದೆ. ಆರೋಪಿಗಳನ್ನು ಪತ್ತೆಹಚ್ಚಲು ತೀವ್ರ ಶೋಧ ನಡೆಯುತ್ತಿದೆ ಎಂದರು.

