Mangalore and Udupi news
ದೇಶ- ವಿದೇಶಪ್ರಸ್ತುತರಾಜಕೀಯ

ಉಕ್ರೇನ್‌ ಅಧ್ಯಕ್ಷ ಝೆಲೆನ್ಸ್ಕಿ ಭೇಟಿಯಾದ ಮೋದಿ

ವಿಶ್ವಸಂಸ್ಥೆಯ ಶೃಂಗಸಭೆ ಹಿನ್ನೆಲೆ ಅಮೆರಿಕಕ್ಕೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ನ್ಯೂಯಾರ್ಕ್‌ನಲ್ಲಿ ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರನ್ನ ಭೇಟಿಯಾಗಿದ್ದಾರೆ. ಕಳೆದ ಮೂರು ತಿಂಗಳಲ್ಲಿ ಇದು ಮೋದಿ-ಝಲೆನ್ಸ್ಕಿ ನಡುವಿನ 3ನೇ ಭೇಟಿಯಾಗಿದೆ.

ಸದ್ಯ ಶೃಂಗ ಸಭೆಯಲ್ಲಿ ವಿದೇಶಾಂಗ ಸಚಿವ ಎಸ್.ಜೈಶಂಕರ್ ಕೂಡ ಉಪಸ್ಥಿತರಿದ್ದು, ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವ ಮಾರ್ಗಗಳ ಕುರಿತು ವಿಸ್ತೃತ ಚರ್ಚೆ ನಡೆಸಲಾಗುತ್ತಿದೆ.

ಇದೇ ವೇಳೆ ಉಕ್ರೇನ್‌ನಲ್ಲಿ ನಡೆಯುತ್ತಿರುವ ಸಂಘರ್ಷವನ್ನು ಆದಷ್ಟು ಬೇಗನೇ ಇತ್ಯರ್ಥಗೊಳಿಸಲು, ಪ್ರದೇಶದಲ್ಲಿ ಶಾಂತಿ ನೆಲೆಸಲು ಮತ್ತು ಸ್ಥಿರತೆ ಕಾಪಾಡಲು ಮಾಡುತ್ತಿರುವ ಭಾರತದ ಪ್ರಯತ್ನಗಳನ್ನು ಝಲೆನ್ಸ್ಕಿ ಶ್ಲಾಘಿಸಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಬರೆದುಕೊಂಡಿರುವ ಪ್ರಧಾನಿ ಮೋದಿ, ನ್ಯೂಯಾರ್ಕ್‌ನಲ್ಲಿ ಉಕ್ರೇನ್ ಅಧ್ಯಕ್ಷ ವೊಲೊಡಿಮಿ‌ರ್ ಝಲೆನ್‌ಸ್ಕಿ ಅವರನ್ನು ಭೇಟಿಯಾಗಿದ್ದೇನೆ. ಉಭಯ ದೇಶಗಳ ನಡುವಣ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಕಳೆದ ತಿಂಗಳ ಉಕ್ರೇನ್ ಭೇಟಿಯ ವೇಳೆ ನಡೆದ ಮಾತುಕತೆಯನ್ನು ಫಲಪ್ರದವಾಗಿ ಜಾರಿಗೊಳಿಸಲು ಬದ್ಧರಾಗಿದ್ದೇವೆ.

ಉಕ್ರೇನ್‌ನಲ್ಲಿ ಸಂಘರ್ಷಕ್ಕೆ ಆದಷ್ಟು ಬೇಗನೇ ಪರಿಹಾರ ಕಂಡುಕೊಳ್ಳುವುದು ಮತ್ತು ಶಾಂತಿ ಹಾಗೂ ಸ್ಥಿರತೆಯ ಮರುಸ್ಥಾಪನೆಗೆ ಭಾರತದ ಬೆಂಬಲವನ್ನು ಪುನರುಚ್ಚರಿಸಿದ್ದೇನೆ ಎಂದು ಅವರು ತಿಳಿಸಿದ್ದಾರೆ.

Related posts

Leave a Comment