Mangalore and Udupi news
ಪ್ರಸ್ತುತರಾಜಕೀಯ

ಒಂದು ರಾಷ್ಟ್ರ ಒಂದು ಚುನಾವಣೆಗೆ ಕೇಂದ್ರ ಸಚಿವ ಸಂಪುಟ ಅಸ್ತು

ಒಂದು ರಾಷ್ಟ್ರ, ಒಂದು ಚುನಾವಣೆ ಪ್ರಸ್ತಾವನೆಗೆ ಬುಧವಾರ ಕೇಂದ್ರ ಸಚಿವ ಸಂಪುಟದ ಒಪ್ಪಿಗೆ ಸಿಕ್ಕಿದೆ. ವರದಿ ಪ್ರಕಾರ ಕೇಂದ್ರ ಸರ್ಕಾರ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಈ ಬಗ್ಗೆ ಮಸೂದೆಯನ್ನು ತರಲಿದೆ. ಕಳೆದ ತಿಂಗಳು ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಮಾಡಿದ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಒಂದು ದೇಶ, ಒಂದು ಚುನಾವಣೆ ಕುರಿತು ಮಾತನಾಡಿದ ಬಳಿಕ ಈ ಬೆಳವಣಿಗೆ ನಡೆದಿದೆ. ಪದೇ ಪದೇ ಚುನಾವಣೆಗಳು ನಡೆಯುವುದರಿಂದ ದೇಶದ ಪ್ರಗತಿಗೆ ಅಡ್ಡಿಯಾಗುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದರು.

ಪ್ರಸ್ತುತ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವು ತನ್ನ ಪ್ರಸ್ತುತ ಅಧಿಕಾರಾವಧಿಯಲ್ಲಿ ಒಂದು ರಾಷ್ಟ್ರ, ಒಂದು ಚುನಾವಣೆ ಜಾರಿಗೆ ತರಲಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿತ್ತು. ಪ್ರಧಾನಿ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದ ಮೂರನೇ ಅವಧಿಯ 100 ದಿನಗಳನ್ನು ಪೂರೈಸಿದ ನಂತರ, ಆಡಳಿತಾರೂಢ ಮೈತ್ರಿಕೂಟದಲ್ಲಿನ ಒಗ್ಗಟ್ಟು ಉಳಿದ ಅವಧಿಯಲ್ಲೂ ಉಳಿಯುತ್ತದೆ ಎಂದು ಮೂಲಗಳು ತಿಳಿಸಿವೆ.

ಇತ್ತೀಚೆಗಷ್ಟೇ ನಡೆದ ಲೋಕಸಭೆ ಚುನಾವಣೆಗೂ ಮುನ್ನ ಬಿಜೆಪಿ ಹೊರಡಿಸಿದ್ದ ಪ್ರಣಾಳಿಕೆಯಲ್ಲಿ ‘ಒಂದು ದೇಶ, ಒಂದು ಚುನಾವಣೆ’ ಎಂಬುದನ್ನೂ ಪ್ರಮುಖ ಭರವಸೆಯಾಗಿ ಸೇರಿಸಲಾಗಿತ್ತು.ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಧ್ಯಕ್ಷತೆಯಲ್ಲಿ ರಚಿಸಲಾದ ಉನ್ನತ ಮಟ್ಟದ ಸಮಿತಿಯು ಈ ವರ್ಷದ ಮಾರ್ಚ್‌ನಲ್ಲಿ ಮೊದಲ ಹಂತವಾಗಿ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸಲು ಶಿಫಾರಸು ಮಾಡಿದೆ.

ಲೋಕಸಭೆ ಮತ್ತು ವಿಧಾನಸಭೆ ಚುನಾವಣೆ ನಡೆದ 100 ದಿನಗಳಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವಂತೆಯೂ ಸಮಿತಿ ಶಿಫಾರಸು ಮಾಡಿದೆ.

 

Related posts

Leave a Comment