
ದೆಹಲಿಯ ವಿಧಾನಸಭಾ ಚುನಾವಣೆಯಲ್ಲಿ 27 ವರ್ಷಗಳ ಬಳಿಕ ಬಿಜೆಪಿ ಭಾರೀ ಬಹುಮತ ಪಡೆಯುವ ಮೂಲಕ ದಿಗ್ವಿಜಯ ಸಾಧಿಸಿದೆ. ಸದ್ಯ ದೆಹಲಿ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ಇದೀಗ ಬಿಜೆಪಿ ತೆರೆ ಎಳೆದಿದೆ. ರೇಖಾ ಗುಪ್ತಾ ಅವರನ್ನು ದೆಹಲಿ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದೆ.
4ನೇ ಮಹಿಳಾ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಆಯ್ಕೆಯಾಗಿದ್ದಾರೆ. ಪರ್ವೇಶ್ ವರ್ಮ ಅವರನ್ನು ಉಪಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ.
ಈ ಬಿಜೆಪಿ ಶಾಸಕರ ಸಭೆಯಲ್ಲಿ ಸಿಎಂ ಹೆಸರನ್ನು ಅಂತಿಮಗೊಳಿಸಲಾಗಿದೆ. (ಫೆಬ್ರವರಿ 20) ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ದೆಹಲಿಯ ರಾಮಲೀಲಾ ಮೈದಾನದಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ.
ಗುರುವಾರ ಬೆಳಿಗ್ಗೆ 11 ಗಂಟೆಗೆ ಪ್ರಾರಂಭವಾಗಲಿರುವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಹಲವಾರು ಹಿರಿಯ ನಾಯಕರು ಭಾಗವಹಿಸಲಿದ್ದಾರೆ. ನೂತನ ಸಿಎಂ, ಸಚಿವರಿಗೆ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಪ್ರಮಾಣವಚನ ಬೋಧಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಕೇಂದ್ರ ಸರ್ಕಾರದ ಸಂಪುಟದ ಸಚಿವರು ಕೂಡ ಭಾಗವಹಿಸಲಿದ್ದಾರೆ.
ರೇಖಾ ಗುಪ್ತಾ ಅವರು ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರನ್ನು ಭೇಟಿ ಮಾಡಿ ಸರ್ಕಾರ ರಚಿಸಲು ಹಕ್ಕು ಮಂಡಿಸಿದ್ದರು. ಬಳಿಕ ಎಲ್ಜಿ ಅವರು ರೇಖಾ ಗುಪ್ತಾ ಅವರಿಗೆ ಸರ್ಕಾರ ರಚಿಸುವಂತೆ ಆಹ್ವಾನ ನೀಡಿದ್ದರು. 27 ವರ್ಷಗಳ ನಂತರ ದೆಹಲಿಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದಿದ್ದು, ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷದ 10 ವರ್ಷಗಳ ಆಡಳಿತ ಅಂತ್ಯಗೊಂಡಿದೆ.