Mangalore and Udupi news
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರುರಾಜ್ಯ

ಮಂಗಳೂರು: ಶ್ರೀಮತಿ ಶೆಟ್ಟಿ ಹತ್ಯೆ – ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ.!!

ಮಂಗಳೂರು : ಕರಾವಳಿಯಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದ ಶ್ರೀಮತಿ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಿಗೆ ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿದೆ.

ಮಂಗಳೂರು ನಗರದ ಅತ್ತಾವರದ ಶ್ರೀಮತಿ ಶೆಟ್ಟಿ ಎಂಬವರನ್ನು ಕೊಲೆಗೈದು ಮೃತದೇಹವನ್ನು 29 ತುಂಡುಗಳನ್ನಾಗಿ ಮಾಡಿ ನಗರದ ಬೇರೆ ಬೇರೆ ಕಡೆಗಳಲ್ಲಿ ಎಸೆದ ಪ್ರಕರಣದಲ್ಲಿ ಅಪರಾಧಿ ದಂಪತಿಗೆ ಜೀವಾವಧಿ ಶಿಕ್ಷೆ ಮತ್ತು ಮೂರನೇ ಅಪರಾಧಿಗೆ ಆರೂವರೆ ತಿಂಗಳು ಶಿಕ್ಷೆ ವಿಧಿಸಿ ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಂಗಳವಾರ ತೀರ್ಪು ನೀಡಿದೆ.

ಸೂಟರ್‌ಪೇಟೆಯ ಜೋನಸ್​​ ಸ್ಯಾಮ್ಸನ್​ (35), ವಿಕ್ಟೋರಿಯಾ ಮಥಾಯಿಸ್​ (47) ಹಾಗೂ ಮರಕಡ ತಾರಿಪಾಡಿ ಗುಡ್ಡೆಯ ರಾಜು (34) ಎಂಬವರ ವಿರುದ್ಧದ ಆರೋಪ ಇತ್ತೀಚೆಗೆ ಸಾಬೀತಾಗಿತ್ತು.

ಈ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಸ್ವಾಮಿ ಎಚ್.ಎಸ್. ಅವರು, ಜೋನಸ್​ ಸ್ಯಾಮ್ಸನ್​​ ಹಾಗೂ ವಿಕ್ಟೋರಿಯಾ ಮಥಾಯಿಸ್​ಗೆ ಐಪಿಸಿ ಸೆಕ್ಷನ್​​ 302 (ಕೊಲೆ) ಹಾಗೂ ಸೆಕ್ಷನ್‌ 34 (ಸಮಾನ ಉದ್ದೇಶದ ಕೊಲೆ) ಅಡಿ ಜೀವಾವಧಿ ಶಿಕ್ಷೆ ಹಾಗೂ ತಲಾ 25 ಸಾವಿರ ದಂಡ ವಿಧಿಸಿದ್ದಾರೆ.

ಪ್ರಕರಣದ ಹಿನ್ನೆಲೆ: ಅತ್ತಾವರ ನಿವಾಸಿ ಶ್ರೀಮತಿ ಶೆಟ್ಟಿ (42) ಶ್ರೀ ಪೊಳಲಿ ಎಲೆಕ್ಟ್ರಾನಿಕ್ಸ್​​ ಅಂಗಡಿ ಇಟ್ಟುಕೊಂಡಿದ್ದರು. ಇದರ ಜೊತೆಗೆ ಚಿಟ್‌ಫಂಡ್ ವ್ಯವಹಾರ ನಡೆಸುತ್ತಿದ್ದರು. ಚಿಟ್ ಫಂಡ್‌ನಲ್ಲಿ ಜೋನಸ್ ಎರಡು ಸದಸ್ಯತ್ವ ಹೊಂದಿದ್ದ. ಆದರೆ ಮಾಸಿಕ ಕಂತು ಪಾವತಿಸಲು ವಿಫಲನಾಗಿದ್ದ. ಮಾಸಿಕ ಕಂತುಗಳ ಹಣ ಪಾವತಿಸುವಂತೆ ಶ್ರೀಮತಿ ಶೆಟ್ಟಿ ಒತ್ತಾಯಿಸುತ್ತಿದ್ದರು ಎನ್ನಲಾಗಿದೆ.‌

2019ರ ಮೇ 11ರಂದು ಬೆಳಗ್ಗೆ 9:15ಕ್ಕೆ ಹಣ ಕೇಳಲು ಶ್ರೀಮತಿ ಶೆಟ್ಟಿ ಆರೋಪಿ ಜೋನಸ್‌ನ ಮನೆಗೆ ತೆರಳಿದ್ದರು. ಅಲ್ಲಿ ಮಾತಿಗೆ ಮಾತು ಬೆಳೆದು ಜೋನಸ್​ ಮರದ ತುಂಡಿನಿಂದ ಶ್ರೀಮತಿ ಶೆಟ್ಟಿ ಅವರ ತಲೆಗೆ ಹೊಡೆದಿದ್ದ.

ಪ್ರಜ್ಞಾಹೀನರಾಗಿದ್ದ ಅವರನ್ನು ಜೋನಸ್ ಮತ್ತಾತನ ಪತ್ನಿ ವಿಕ್ಟೋರಿಯಾ ಬಚ್ಚಲು ಕೋಣೆಗೆ ಎಳೆದುಕೊಂಡು ಹೋಗಿ ಚಿನ್ನಾಭರಣಗಳನ್ನು ಸುಲಿಗೆ ಮಾಡಿ ಕುತ್ತಿಗೆ ಕೊಯ್ದು ರುಂಡ, ಕೈ, ಕಾಲು ಹಾಗೂ ಇತರ ಭಾಗಗಳನ್ನು 29 ತುಂಡುಗಳಾಗಿ ಮಾಡಿ ಪ್ಲಾಸ್ಟಿಕ್ ಗೋಣಿ ಚೀಲದಲ್ಲಿ ತುಂಬಿಸಿ ನಗರದ ಹಲವೆಡೆ ಎಸೆದಿದ್ದರು. ವ್ಯಾನಿಟಿ ಬ್ಯಾಗ್, ಚಪ್ಪಲಿಯನ್ನು ಮನೆಯಲ್ಲಿ ಸುಟ್ಟು ಹಾಕಿದ್ದರು.

ಮೂರು ದಿನದ ಬಳಿಕ ಕದ್ರಿ ಬಳಿಯ ಅಂಗಡಿಯೊಂದರ ಬಳಿ ರುಂಡ ಪತ್ತೆಯಾದ ಬಳಿಕ ಕೊಲೆ ಪ್ರಕರಣ ಬೆಳಕಿಗೆ ಬಂದಿತ್ತು. ನಂತರ ನಂದಿಗುಡ್ಡೆಯಲ್ಲಿ ದೇಹದ ತುಂಡುಗಳು ಪತ್ತೆಯಾಗಿದ್ದವು. ಈ ಪ್ರಕರಣದಲ್ಲಿ ರಾಜು ಕೂಡ ಸಹಕರಿಸಿದ್ದ. ಕದ್ರಿ ಠಾಣೆಯ ನಿರೀಕ್ಷಕ ಮಹೇಶ್ ಎಂ. ತನಿಖೆ ಕೈಗೊಂಡಿದ್ದರು.

ಇನ್ಸ್‌ಪೆಕ್ಟ‌ರ್ ಶಾಂತಾರಾಂ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ನ್ಯಾಯಾಧೀಶ ಮಲ್ಲಿಕಾರ್ಜುನ ಸ್ವಾಮಿ 48 ಸಾಕ್ಷಿಗಳನ್ನು ವಿಚಾರಣೆಗೊಳಪಡಿಸಿ, 141 ದಾಖಲೆಗಳನ್ನು ಗುರುತಿಸಿ ಮೂವರ ಮೇಲಿನ ಕೊಲೆ ಆರೋಪ ಸಾಬೀತಾಗಿದೆ ಎಂದು ತೀರ್ಪು ನೀಡಿದ್ದರು. ಸರಕಾರದ ಪರವಾಗಿ ಸರಕಾರಿ ಅಭಿಯೋಜಕಿ ಜುಡಿತ್ ಓಲ್ಲಾ ಮಾರ್ಗರೇಟ್ ಕ್ರಾಸ್ತಾ ವಾದಿಸಿದ್ದರು.

Related posts

Leave a Comment