
ಆಂಧ್ರ ಪ್ರದೇಶದ ತಿರುಪತಿ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಬುಧವಾರ ರಾತ್ರಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ.
ತಿರುಪತಿಯಲ್ಲಿ ವೈಕುಂಠ ದ್ವಾರ ದರ್ಶನಕ್ಕಾಗಿ ಟಿಕೆಟ್ ನೀಡುತ್ತಿದ್ದ ವೇಳೆ ಭಾರೀ ನೂಕುನುಗ್ಗಲಿನಿಂದ ಕಾಲ್ತುಳಿತ ಸಂಭವಿಸಿದ ಪರಿಣಾಮ ಆರು ಜನ ಭಕ್ತರು ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ತಿರುಮಲ ಇತಿಹಾಸದಲ್ಲಿ ಇದೊಂದು ಭೀಕರ ದುರಂತವಾಗಿದೆ.
ವೈಕುಂಠ ಏಕಾದಶಿ ಪ್ರಯುಕ್ತ ತಿರುಪತಿಯ ವಿಷ್ಣು ನಿವಾಸಂನಲ್ಲಿ ಶುಕ್ರವಾರದಿಂದ 10 ದಿನಗಳ ಕಾಲ ವೈಕುಂಠ ದ್ವಾರ ಸರ್ವದರ್ಶನಕ್ಕಾಗಿ ಗುರುವಾರದಿಂದ ತಿರುಪತಿಯ 9 ಕೇಂದ್ರಗಳಲ್ಲಿ 94 ಕೌಂಟರ್‌ಗಳ ಮೂಲಕ ಟೋಕನ್ ವಿತರಣೆಗೆ ಟಿಟಿಡಿ ವ್ಯವಸ್ಥೆ ಮಾಡಿದೆ. ಆದರೆ, ನಿನ್ನೆ ಸಂಜೆ ದರ್ಶನದ ಟಿಕೆಟ್ ಪಡೆಯಲು ಪ್ರತಿ ಕೌಂಟರ್‌ಗೆ 20 ಸಾವಿರಕ್ಕೂ ಹೆಚ್ಚು ಜನರು ಆಗಮಿಸಿದ್ದರು ಹೀಗಾಗಿ ಸರಿಯಾದ ವ್ಯವಸ್ಥೆ ಇಲ್ಲದೆ ದುರಂತ ಸಂಭವಿಸಿದೆ ಎಂದು ಹಲವರು ಆರೋಪಿಸಿದ್ದಾರೆ.
ಭಾರೀ ಸಂಖ್ಯೆಯಲ್ಲಿ ಭಕ್ತರು ಟೋಕನ್ ಪಡೆಯಲು ಯತ್ನಿಸಿದ್ದರಿಂದ ನೂಕುನುಗ್ಗಲು ಉಂಟಾಯಿತು. ಇದೇ ವೇಳೆ ಭಕ್ತರೊಬ್ಬರು ಅಸ್ವಸ್ಥರಾದರು. ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಮುಖ್ಯ ಗೇಟ್ ತೆರೆಯಲಾಯಿತು. ಈ ಸಂದರ್ಭ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆ ಗೇಟ್ ಮೂಲಕ ನುಗ್ಗಿದ್ದಾರೆ. ಹೀಗಾಗಿ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಇನ್ನು ಕಾಲ್ತುಳಿತದಲ್ಲಿ ಗಾಯಗೊಂಡವರ ಸಂಖ್ಯೆ ಏರಿಕೆಯಾಗುವ ನಿರೀಕ್ಷೆ ಇದೆ.
ಘಟನೆಯ ಬಗ್ಗೆ ಪ್ರತಿಕ್ರಿಯಿಸಿರುವ ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಅವರು, ಟೋಕನ್ ಪಡೆಯಲು ಬಂದಿದ್ದ ಭಕ್ತರು ಪ್ರಾಣ ಕಳೆದುಕೊಂಡಿರುವುದು ತೀವ್ರ ಬೇಸರ ತಂದಿದೆ ಎಂದು ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ಜೊತೆಗೆ ಹಿರಿಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ತೆರಳಿ ಪರಿಹಾರ ಕ್ರಮಗಳನ್ನು ಕೈಗೊಂಡು ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ದೊರೆಯುವಂತೆ ನೋಡಿಕೊಳ್ಳಬೇಕು ಎಂದು ಆದೇಶಿಸಿದ್ದಾರೆ.